“ಬಾಂಬೆ ಟೀಮ್‌ನಿಂದ ಬಿಜೆಪಿಯಲ್ಲಿ ಶಿಸ್ತು ಮಾಯವಾಗಿದೆ: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಬೇಸರ.
ಹುಬ್ಬಳ್ಳಿ: ಬಾಂಬೆ ಟೀಮ್ ಅನ್ನು ಬಿಜೆಪಿಗೆ ಕರೆ ತಂದಿರುವುದೇ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲು ಕಾರಣವಾಯಿತ್ತು ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಹೀನಾಯವಾಗಿ ಸೋತಿರುವುದಕ್ಕೆ ಪಕ್ಷದ ನಾಯಕರು ಆತ್ಮಾವಲೋಕನ ಸಭೆ ನಡೆಸುತ್ತಿದ್ದು, ಇಂದು ಹುಬ್ಬಳ್ಳಿಯಲ್ಲಿ ಕೆ.ಎಸ್.ಈಶ್ವರಪ್ಪ ಮಾತನಾಡುತ್ತಾ, ಬಿಜೆಪಿಯಲ್ಲಿ ಸದ್ಯ ಅಶಿಸ್ತು ಮೂಡಿದೆ, ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸಿಗರು ಬಂದ ನಂತರ ಪಕ್ಷದಲ್ಲಿ ಅಲ್ಪ ಸ್ವಲ್ಪ ಅಶಿಸ್ತು ಮೂಡಿದ್ದು, ಅಶಿಸ್ತು ತೋರುವವರ ಬಾಲವನ್ನು ಕಟ್ ಮಾಡುತ್ತೇವೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಿಜೆಪಿಯಲ್ಲಿ ಬಹಿರಂಗವಾಗಿ ಅಡ್ಜೆಸ್ಟ್ಮೆಂಟ್ ರಾಜ್ಯ ಕಾರಣದ ಬಗ್ಗೆ ಚರ್ಚೆ ಆಗುತ್ತಿರುವುದು ದುರ್ದೈವದ ಸಂಗತಿ. ಇಂತಹದ್ದೆನ್ನಲ್ಲ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಕು. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರೊಂದಿಗೆ ನಾನು ಮಾತನಾಡುತ್ತೇನೆ ಎಂದರು.
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮುಳುವಾಯುತ್ತು. ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದಿರುವುದಕ್ಕೆ ಸಮಸ್ಯೆ ಅನುಭವಿಸುತ್ತಿದ್ದೇವೆ ಎನ್ನುತ್ತಾ ಪರೋಕ್ಷವಾಗಿ ಆಪರೇಷನ್ ಕಮಲದ ವಿರುದ್ದ ಕೆ.ಎಸ್ ಈಶ್ವರಪ್ಪ ಗರಂ ಆದರು.
2019 ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಬಿಜೆಪಿ ಪಕ್ಷವು ಕಾಂಗ್ರೆಸ್-ಜೆಡಿಎಸ್ ಪಕ್ಷದ 16 ಶಾಸಕರ ರಾಜೀನಾಮೆ ಕೊಡಿಸಿ, ಆಪರೇಷನ್ ಕಮಲ ನಡೆಸಿತ್ತು. ಆನಂತರ ನಡೆದಿದ್ದ ಉಪ ಚುನಾವಣೆಯಲ್ಲಿ 14 ಕಡೆ ಬಿಜೆಪಿ ಗೆಲುವು ಕಂಡಿತ್ತು.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ನಂತರ ಕಾರ್ಯಕರ್ತರು ನಿರಾಶೆಯಲ್ಲಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಏಳು ತಂಡಗಳಲ್ಲಿ ಪ್ರವಾಸ ಕೈಗೊಂಡು ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಕೆಲಸ ಮಾಡಲಾಗುತ್ತಿದೆ. ಈ ಮೂಲಕ ಲೋಕಸಭೆ ಚುನಾವಣೆಗೆ ಬಿಜೆಪಿ ಸಕಲ ರೀತಿಯಲ್ಲಿ ಸಿದ್ದತೆ ನಡೆಸುತ್ತಿದೆ ಎಂದು ಪ್ರತಿಕ್ರಿಯಿಸಿದರು.