ಪಕ್ಷದ ವರಿಷ್ಠರು ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವೆ: ಡಾ. ಯತಿಂದ್ರ ದಿಲ್ಲಿಗೆ ಹೋಗಲು ಒಲವು ?
ಮೈಸೂರು: ಪಕ್ಷದ ವರಿಷ್ಠರು ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಈ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ತಂದೆ ಸಿದ್ದರಾಮಯ್ಯ ಅವರಿಗಾಗಿ ವರುಣ ಕ್ಷೇತ್ರವನ್ನು ತ್ಯಾಗ ಮಾಡಿದ್ದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಮಾತನಾಡಿ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ಬೆಂಬಲಿಗರ ಒತ್ತಾಯದ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನಾನಾಗಲಿ ತಂದೆಯವರಾಗಲಿ ಚರ್ಚೆ ನಡೆಸಿಲ್ಲ. ಪಕ್ಷ ಸೂಚಿಸಿದರೆ ಆದೇಶ ಪಾಲಿಸಲು ಸಿದ್ಧನಿದ್ದೇನೆ. ಲೋಕಸಭಾ ಚುನಾವಣೆಗೆ ಇನ್ನೂ 8 ತಿಂಗಳ ಕಾಲಾವಕಾಶ ಇದೆ. ಚುನಾವಣೆ ಸಮೀಪಿಸುತ್ತಿದ್ದಂತೆ, ಕ್ಷೇತ್ರದಿಂದ ಪಕ್ಷಕ್ಕೆ ಯಾರು ಸೂಕ್ತ ಅಭ್ಯರ್ಥಿ ಎಂದು ಗೊತ್ತಾಗಲಿದೆ ಎಂದು ಹೇಳಿದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು. ಆದ್ದರಿಂದ ಪಕ್ಷದಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುತ್ತೇವೆ. ಒಂದು ವೇಳೆ ನಾನು ಸ್ಪರ್ಧೆ ಮಾಡಬೇಕು ಎಂದು ಪಕ್ಷ ಸೂಚನೆ ನೀಡಿದರೆ ಪಾಲನೆ ಮಾಡಬೇಕಾಗುತ್ತದೆ ಎಂದರು.
ಇನ್ನು ಪಕ್ಷದಲ್ಲಿ ಸ್ಥಾನಮಾನ ನೀಡುವ ಬಗ್ಗೆಯೂ ಕೂಡ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ್ದಾರೆ.
ತಂದೆಯವರು ಮುಖ್ಯಮಂತ್ರಿ ಆಗಿರುವ ಕಾರಣ ಕ್ಷೇತ್ರದ ಜನರಿಗೆ ಹೆಚ್ಚು ಸಮಯ ಕೊಡಲಾಗುತ್ತಿಲ್ಲ. ವರುಣ ಕ್ಷೇತ್ರದ ಜನರ ಸಮಸ್ಯೆಯನ್ನು ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಅಧಿಕಾರಿಗಳಿಗೆ ಹೇಳಿ ಜನರ ಸಣ್ಣ ಪುಟ್ಟ ಸಮಸ್ಯೆ ಬಗೆಹರಿಸಲು ಸರ್ಕಾರಿ ಸ್ಥಾನಮಾನ ಇರಬೇಕು. ನನಗೆ ಯಾವುದಾದರು ಚಿಕ್ಕದಾದ ಸ್ಥಾನಮಾನ ನೀಡಿದರೆ ಸಹಕಾರಿ ಆಗುತ್ತದೆ. ಕಳೆದ ಬಾರಿಯಂತೆ ಸಣ್ಣ ಹುದ್ದೆ ನೀಡಿದರು ನಾನು ಉತ್ತಮವಾಗಿ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.