ಮಾಜಿ ಸಿಎಂ ಎನ್. ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ.
ಆಂಧ್ರಪ್ರದೇಶ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಸಿಎಂ ಎನ್. ಚಂದ್ರಬಾಬು ನಾಯ್ಡು ಅವರನ್ನು ಎಸಿಬಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕೌಶಲ್ಯಾಭಿವೃದ್ಧಿ ನಿಗಮದ (ಎಪಿಎಸ್‌ಎಸ್‌ಡಿಸಿ) ಹಗರಣಕ್ಕೆ ಸಂಬಂಧಿಸಿದಂತೆ ನಾಯ್ಡು ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನ್ಯಾಯಾಲಯವು ಭಾನುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಆಂಧ್ರಪ್ರದೇಶದ ಮಾಧ್ಯಮಗಳು ವರದಿ ಮಾಡಿದೆ.
ವಿಜಯವಾಡದ ಎಸಿಬಿ ನ್ಯಾಯಾಲಯದ ನ್ಯಾಯಾಧೀಶೆ ಹಿಮಬಿಂದು ಅವರು ಪ್ರಕರಣದ ವಿಚಾರಣೆ ನಡೆಸಿದ ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಬಳಿಕ ಮಾಜಿ ಸಿಎಂ ಅವರನ್ನು ರಾಜಮಂಡ್ರಿಯ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲು ಸೂಚಿಸಿದ್ದಾರೆ.
ಭಾನುವಾರ ಬೆಳಗ್ಗೆ ನಾಯ್ಡು ಅವರನ್ನು ಕೌಶಲ್ಯಾಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ವಿಜಯವಾಡದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಶನಿವಾರ ಬೆಳಗ್ಗೆ ಆಂಧ್ರಪ್ರದೇಶದ ಅಪರಾಧ ತನಿಖಾ ಇಲಾಖೆ (ಸಿಐಡಿ) ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಿತ್ತು.