ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಮುಖ್ಯಮಂತ್ರಿಗಳಿಗೆ ಪತ್ರ: ಶಾಸಕ ಅರವಿಂದ ಬೆಲ್ಲದ.
ಹುಬ್ಬಳ್ಳಿ: ರಾಣಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಗಣೇಶ ಚತುರ್ಥಿ ನಿಮಿತ್ತ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸರ್ಕಾರ ಅನುಮತಿ ನೀಡಿತ್ತು. ಅದೇ ಮಾದರಿಯಲ್ಲಿ ಈ ವರ್ಷವೂ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.
ರಾಣಿ ಚನ್ನಮ್ಮ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಕೊಟ್ಟಿದ್ದಾರೆ. ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಸಮುದಾಯಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ಗಣೇಶ ಪ್ರತಿಷ್ಠಾಪನೆಗೂ ಅವಕಾಶ ನೀಡಬೇಕು. ಅವಕಾಶ ನೀಡದಿದ್ದರೂ ಸೂರ್ಯ, ಚಂದ್ರರು ಹುಟ್ಟುವುದು ಎಷ್ಟು ಸತ್ಯವೋ ಚೆನ್ನಮ್ಮಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಯೂ ಅಷ್ಟೇ ಸತ್ಯ ಎಂದ ಅವರು, ಕಾಂಗ್ರೆಸ್ ಸರ್ಕಾರದ ಕುಮ್ಮಕಿನಿಂದ ಕೆಲ ಸಂಘಟನೆಗಳು ಗಣೇಶ ಪ್ರತಿಷ್ಠಾಪನೆಗೆ ವಿರೋಧ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಅಲ್ಪಸಂಖ್ಯಾತರ ತುಷ್ಟೀರಣ ಮಾಡುತ್ತಿದ್ದು, ಸಿದ್ದರಾಮಯ್ಯ ಸರ್ಕಾರ ಗಣೇಶ ಪ್ರತಿಷ್ಟಾಪನೆಗೆ ಅವಕಾಶ ನೀಡುತ್ತಿಲ್ಲ. ಈಗಾಗಲೇ ಸರ್ವೋಚ್ಛ ನ್ಯಾಯಾಲಯವು ಈ ಮೈದಾನವು ಮಹಾನಗರ ಪಾಲಿಕೆಗೆ ಸೇರಿದ್ದು. ಮೈದಾನವನ್ನು ಸಾರ್ವಜನಿಕರ ಉಪಯೋಗಕ್ಕೆ ಬಳಸಬಹುದು ಎಂದು ಆದೇಶಿಸಿದೆ.
ಮೂರ್ತಿ ಪ್ರತಿಷ್ಠಾಪಿಸಲು ಅನುಮತಿ ನೀಡದಿದ್ದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಅಶಾಂತಿ ಉಂಟಾದರೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದೇನೆ ಎಂದರು.