ಪಾಕಿಸ್ತಾನ ಪರ ಘೋಷಣೆ: ಕೆಪಿಸಿಸಿ ಕಚೇರಿಗೆ ಬಿಜೆಪಿ ನಾಯಕರ ಮುತ್ತಿಗೆ ಯತ್ನ!
ಬೆಂಗಳೂರು: ವಿಧಾನಸೌಧದ ಲಾಂಜ್ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ರಾಜ್ಯಸಭೆ ಚುನಾವಣೆ ಗೆದ್ದ ನಾಸಿರ್ ಹುಸೇನ್ ಬೆಂಬಲಿಗರೊಬ್ಬರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಂಗಳವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ವಿಭಾಗದ ಡಿಸಿಪಿ ಶೇಖರ್ ನೇತೃತ್ವದಲ್ಲಿ ವಶಕ್ಕೆ ಪಡೆದ ಕಾರ್ಯಕರ್ತರನ್ನು ಪೊಲೀಸ್ ವಾಹನದಲ್ಲಿ ತುಂಬಿಸಿ ಕರೆದೊಯ್ದಿದ್ದಾರೆ.
ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದವರನ್ನು ಮೈಸೂರು ರಸ್ತೆ ಸಿಎಆರ್ ಮೈದಾನದಲ್ಲಿ ಕೂಡಿ ಇಡಲಾಗಿತ್ತು. ಇದರಿಂದ ರೊಚ್ಚಿಗೆದ್ದ ಬಿಜೆಪಿ ನಾಯಕರು ಸಿಎಆರ್ ಮೈದಾನದಲ್ಲೇ ಕೂತು ಪ್ರತಿಭಟನೆ ಮುಂದುವರಿಸಿದರು. ನಮ್ಮನ್ನು ಕತ್ತಲೆಯಲ್ಲಿ ತಂದು ಕೂರಿಸಿದ್ದಾರೆಂದು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.
ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಆರೋಪ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು ಮಾಡಲಾಗಿದೆ. ಕರ್ತವ್ಯನಿರತ ಎಎಸ್ಐ ಶಿವಕುಮಾರ್ ದೂರಿನ ಅನ್ವಯ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 505(1)(B), 153B ಅಡಿ ಪ್ರಕರಣ ದಾಖಲು ಮಾಡಲಾಗಿದೆ.