ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಬೃಹತ್ ಮಾನವ ಸರಪಳಿ ನಿರ್ಮಾಣ.

ಧಾರವಾಡ: ಡಾ.ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ, ಸಮಾನತೆ ಹಾಗೂ ಭಾತೃತ್ವ ದೊರೆಯುವಂತೆ ಮಾಡಿದ್ದಾರೆ. ಪ್ರತಿಯೊಬ್ಬರೂ ದೇಶದ ಏಕತೆಯನ್ನು ಕಾಪಾಡಿಕೊಂಡು ಹೋಗಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು.
ಇಂದು ಕರ್ನಾಟಕ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವವು ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯಕ್ಕಾಗಿ ನಮ್ಮ ಅತ್ಯುನ್ನತ ಆಕಾಂಕ್ಷೆಗಳನ್ನು ಸಾಕಾರಗೊಳಿಸುವ ಶಕ್ತಿಯುತ ಮತ್ತು ಕ್ರಿಯಾತ್ಮಕ ಶಕ್ತಿಯಾಗಿದೆ. ಭಾರತ ದೇಶವು ಅತ್ಯಂತ ಭವ್ಯ, ಶಕ್ತಿಶಾಲಿ ಮತ್ತು ಯಶಸ್ವಿ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ದೇಶವಾಗಿದೆ ಎಂದು ಸಚಿವ ಸಂತೋಷ ಲಾಡ ಅವರು ತಿಳಿಸಿದರು.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೀದರ್ ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿ ನಿರ್ಮಾಣ ಮಾಡಲಾಗುತ್ತಿದೆ. ಆ ಮೂಲಕ ವಿಶಿಷ್ಟ ದಾಖಲೆಯನ್ನು ನಿರ್ಮಿಸಲಾಗುತ್ತಿದೆ.
ಈ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ 3.5 ಲಕ್ಷ ಜನರು ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ಇಡೀ ರಾಜ್ಯದಲ್ಲೇ ಜಿಲ್ಲೆಯು ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಈ ಬೃಹತ್ ಮಾನವ ಸರಪಳಿ ನಿರ್ಮಾಣದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಸಾಕ್ಷಿಯಾದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.